2,381 total views
ಶಿಕಾರಿಪುರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಜನಪ್ರಿಯ ಶಾಸಕರಾದ ಶ್ರೀ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.ಎಲ್ಲೆಡೆ ಧಾರಾಕಾರವಾಗಿ ಮಳೆಯಾಗಿದ್ದು ಮಳೆ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರವಾಗಿ ಪರಿಹಾರ ತಲುಪಿಸುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ನಿತ್ಯ ಸುರಿಯುತ್ತಿರುವ ಮಳೆಯಿಂದಾಗಿ ಕೆರೆಕಟ್ಟೆಗಳ ಪರಿಸ್ಥಿತಿ, ಲೋಕೋಪಯೋಗಿ ವ್ಯಾಪ್ತಿಯ ಕಟ್ಟಡಗಳ ಪರಿಸ್ಥಿತಿ, ಪ್ರತಿನಿತ್ಯ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಸಾರಿಗೆ ಸೇರಿದಂತೆ ಇನ್ನಿತರ ಪ್ರಮುಖ ವಿಚಾರಗಳಲ್ಲಿ ತೊಂದರೆಯಾಗದಂತೆ ಕ್ರಮವಹಿಸಲು ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಯಿತು.
ಸದ್ಯ ರೈತರ ಹಿಂಗಾರು ಸೇರಿ ವಾತಾವರಣದನ್ವಯ ಬೆಳೆಯುವ ಬೆಳೆಗಳು, ಅಡಿಕೆ, ಮೆಕ್ಕೇಜೋಳ ಸೇರಿದಂತೆ ಮಳೆಯಿಂದ ಹಾನಿಗೊಳಗಾದ ರೈತರ ಬೆಳೆಗಳ ಕುರಿತು ಮಾಹಿತಿ ಪಡೆದು, ಆರೋಗ್ಯ ಇಲಾಖೆ ಹಾಗೂ ಕ್ಷೇತ್ರದ ವಿವಿಧ ಇಲಾಖೆಗಳ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ತುರ್ತಾಗಿ ಕೈಗೆತ್ತಿಕೊಳ್ಳಬೇಕಿರುವ ವಿವಿಧ ಕಾಮಗಾರಿಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಯಿತು.ಈ ವೇಳೆ ತಾಲ್ಲೂಕು ದಂಡಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.