12,798 total views
ಶಿರಸಿ: ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿರಸಿಯ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಪ್ರಾಚಿ ಮಂಜುನಾಥ ನಾಯಕ ಇವರು ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಪ್ರಾಚಿ, ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನ ಹಾಗೂ ಒಂದು ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಅವರು ೫೦ ಮೀಟರ್ ಫ್ರೀ ಸ್ಟೈಲ್ ಹಾಗೂ ೧೦೦ ಮೀಟರ್ ಫ್ರೀ ಸ್ಟೈಲ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. ಇದರ ಜೊತೆಗೆ, ೫೦ ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಈಜು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನೂ ಗೆದ್ದರು. ಈ ಮೂಲಕ ಒಟ್ಟು ಎರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಗೆಲ್ಲುವ ಮೂಲಕ ಪ್ರಾಚಿ ಮಂಜುನಾಥ ನಾಯಕ ಅವರು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಾಚಿ ಅವರ ಈ ಸಾಧನೆಗೆ ಶಿರಸಿಯ ಮಾರಿಕಾಂಬಾ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ ಮತ್ತು ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದ್ದಾರೆ.























































